2-11-2021
ಪ್ರಕಟಣೆಯ ಕೃಪೆಗಾಗಿ
ಮತಪ್ರಮಾಣ ಹೆಚ್ಚಳವೇ ಜನರ ಬೆಂಬಲ ಹೆಚ್ಚಳಕ್ಕೆ ಸಾಕ್ಷಿ- ಎನ್.ರವಿಕುಮಾರ್
ಬೆಂಗಳೂರು: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ ಭೂಸನೂರು ಅವರು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಂದು ಸೀಟು ಗೆದ್ದು, ಇನ್ನೊಂದು ಸೀಟಿನಲ್ಲಿ ಸೋತಿದ್ದರೂ ಬಿಜೆಪಿ ತನ್ನ ಮತಪ್ರಮಾಣವನ್ನು ಹೆಚ್ಚಿಸಿಕೊಂಡಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್ ತಿಳಿಸಿದ್ದಾರೆ.
ಜನರು ಬಿಜೆಪಿ ಪರವಾಗಿದ್ದಾರೆ. ಜನಪರ ಕಾರ್ಯಕ್ರಮಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ಪ್ರಧಾನಿಗಳಾದ ನರೇಂದ್ರ ಮೋದಿಯವರು, ರೈತಪರ ಹೋರಾಟಗಾರರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ದೂರದೃಷ್ಟಿಯಿಂದ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
2019ರಲ್ಲಿ ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೆಸ್ 2 ಹಾಗೂ ಪಕ್ಷೇತರರು ಒಂದು ಸ್ಥಾನ ಗೆದ್ದಿದ್ದರು. 2020ರಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಎರಡರಲ್ಲಿ ಎರಡೂ ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಅಲ್ಲದೆ ವಿಧಾನಪರಿಷತ್ ಚುನಾವಣೆಯಲ್ಲೂ ಜಯಭೇರಿ ಬಾರಿಸಿತ್ತು. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಪಕ್ಷದ ಶೇ 50ಕ್ಕೂ ಹೆಚ್ಚು ಜನಪ್ರತಿನಿಧಿಗಳು ಆಯ್ಕೆಯಾಗಿದ್ದರು. ಆಗ ಕೆಪಿಸಿಸಿ ಅಧ್ಯಕ್ಷರು ರಾಜೀನಾಮೆ ನೀಡಿದ್ದರೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕೇವಲ ಒಂದು ಚುನಾವಣೆಯಲ್ಲಿ ಗೆದ್ದೊಡನೆ ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಅತ್ಯಂತ ಹಾಸ್ಯಾಸ್ಪದ. ಬೂತ್ ಮಟ್ಟದಲ್ಲಿ ಪಕ್ಷ ಬಲವಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸದೃಢವಾಗಿ ಬೆಳೆಸಿದ್ದಾರೆ. ಆದ್ದರಿಂದ ರಾಜ್ಯಾಧ್ಯಕ್ಷರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಬೆಳವಣಿಗೆಯನ್ನು ಸಹಿಸದವರು ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುತ್ತಿರುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಪಂಚರಾಜ್ಯ ಚುನಾವಣೆಯಲ್ಲೂ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಇದೆಲ್ಲವನ್ನೂ ಮರೆತಿರುವ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಪಕ್ಷವು ಭಾರಿ ಸಾಧನೆ ಮಾಡಿದಂತೆ ಬಿಂಬಿಸಿಕೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ರವಿಕುಮಾರ್ ಅವರು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದು ಮರೆತು ಹೋಗಿದೆಯೇ? ಹಾನಗಲ್ ಸೋಲಿನ ಕಾರಣವನ್ನು ನೆಪವಾಗಿ ಇಟ್ಟುಕೊಂಡು ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಎಷ್ಟು ಸರಿ? ಎಂದು ಪ್ರಶ್ನಿಸಿರುವ ಅವರು, 2019 ಹಾಗೂ ನಂತರ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದಾಗ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆಯೇ ಎಂಬುದನ್ನು ಸಿದ್ದರಾಮಯ್ಯ ಅವರು ನೆನಪಿಸಿಕೊಳ್ಳುವುದು ಸೂಕ್ತ ಎಂದೂ ಅವರು ತಿಳಿಸಿದ್ದಾರೆ.
ಅದೇರೀತಿಯಲ್ಲಿ ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಡಿಮೆ ಸ್ಥಾನಗಳು ಬಂದಾಗ ಮೌನಿಗಳಂತಿದ್ದ ಕಾಂಗ್ರೆಸ್ ನಾಯಕರು ಈಗ ಒಂದು ಸ್ಥಾನ ಗೆದ್ದೊಡನೆ ಜನಾಭಿಪ್ರಾಯ ಸರಕಾರದ ವಿರುದ್ಧ ಇದೆ ಎಂದು ಹೇಳುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಹಾನಗಲ್ ಉಪ ಚುನಾವಣೆಯ ಸೋಲಿನಿಂದ ಸರಕಾರದ ಮೇಲೆ ಗಂಭೀರ ಪರಿಣಾಮ ಉಂಟಾಗುವುದಿಲ್ಲ. ಗರಿಷ್ಠ ಪ್ರಮಾಣದ ಮತ ನೀಡಿ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಕುರಿತು ಮೆಚ್ಚುಗೆ ಸೂಚಿಸಿದ ಮತದಾರರನ್ನು ಪಕ್ಷವು ಅಭಿನಂದಿಸುತ್ತದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್, ಮುಖಂಡರು ಹಾಗೂ ಕಾರ್ಯಕರ್ತರು ಈ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ದುಡಿದಿದ್ದಾರೆ. ಅವರೆಲ್ಲರಿಗೂ ಪಕ್ಷವು ಕೃತಜ್ಞತೆ ಸಲ್ಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment