ಬೆಂಗಳೂರು: 'ಇನ್ನುಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಇದನ್ನು ತಡೆಯಲು ಕ್ರಮ ಕೈಗೊಳ್ಳುವುದು ಮಾತ್ರವಲ್ಲದೇ, ಈಗಾಗಲೇ ಇರುವ ಬಡಾವಣೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಇಲಾಖೆ ಸಭೆಯನ್ನು ಸೋಮವಾರ ನಡೆಸಿದ ಅವರು, ಈ ನಿರ್ದೇಶನ ನೀಡಿದರು.

ಕಂದಾಯ ಇಲಾಖೆಯಲ್ಲಿ ಯಾವ ಯಾವ ಸರ್ವೆ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು, ನಿವೇಶನಗಳ ದತ್ತಾಂಶ ಇದೆ. ಈ ಮಾಹಿತಿ ಆಧರಿಸಿ ಒಂದೇ ಯೋಜನೆಯಲ್ಲಿ ಅಂತಹ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇಲ್ಲ. ಗ್ರಾಮ ಪಂಚಾಯತಿಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿಲ್ಲ. ಖಾತೆ ಇಲ್ಲದೇ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಲೇಬೇಕು. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆಯ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

'ಖಾತಾ ವಿತರಣೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿದೆ. ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಒಂದೇ ನಿವೇಶನವನ್ನು ಹಲವರಿಗೆ ಮಾರುವ ವಂಚನೆಗೆ ಕಡಿವಾಣ ಹಾಕಬೇಕು. ನಕಲಿ ದಾಖಲೆಗಳನ್ನು ಪರಿಶೀಲಿಸದೇ ಆಸ್ತಿ ನೋಂದಣಿ ಮಾಡಲಾಗುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೆಲವು ಅಧಿಕಾರಿಗಳು ವಂಚಕರಿಗೆ ನೆರವಾಗುತ್ತಿದ್ದಾರೆ. ಇದಕ್ಕೂ ಕಡಿವಾಣ ಹಾಕುತ್ತೇವೆ' ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ದತ್ತಾಂಶ ಕಂಪ್ಯೂಟರ್‌ನಲ್ಲಿ ಇರಬೇಕು. ಈ ದತ್ತಾಂಶ ಆಧರಿಸಿಯೇ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದರು.

ಸಭೆಯ ಪ್ರಮುಖ ಅಂಶಗಳು:

* ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆ ನಡೆಸಬೇಕು. ಫೆಬ್ರುವರಿ 10ರ ಒಳಗೆ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು

* ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ

* ಈ ವರ್ಷ ಡಿಸೆಂಬರ್‌ ಕೊನೆಗೆ ₹16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ

* ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ ₹800 ಕೋಟಿ ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ, ಸುಮಾರು 90 ಲಕ್ಷ ಆಸ್ತಿಗಳಿಗೆ ಇನ್ನೂ ಖಾತಾ ಇಲ್ಲ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಕುರಿತು ಕ್ರಮ ತೆಗೆದುಕೊಳ್ಳುವುದು

*ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು

* ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ತೆಗೆದುಕೊಳ್ಳಬೇಕು

ನ್ಯೂಸ್ ಮತ್ತು ವಿಶೇಷ

Post a Comment

Previous Post Next Post